ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇಂದಿರಾ ನಗರದ 80 ಫೀಟ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವಾಗಿ ಬಂದ ಬೆನ್ಜ್ ಕಾರು ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ.
ವೇಗವಾಗಿ ಬಂದ ಬೆನ್ಜ್ ಕಾರು ಎರಡು ಆಟೋ, ಎರಡು ಮಿನಿ ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಲಸೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.