ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ ತಿಂಗಳ ಮೊದಲ ವಾರ ಮುಗಿದರೂ ಮಳೆಯ ಆತಂಕ ಮಾತ್ರ ನಿಲ್ಲುತ್ತಿಲ್ಲ. ಇನ್ನೂ ಮೂರು ದಿನ ರಾಜ್ಯ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರ ಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಬೆಂಗಳೂರಿನಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ.
ಮಳೆಯಿಂದಾಗಿ ತತ್ತರಿಸಿ ಹೋಗಿದ್ದ ತಮಿಳುನಾಡು ಹಾಗೂ ಆಂಧ್ರಪ್ರದೇಶ, ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚೆನ್ನೈನಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.