ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಮಾಡಲಾದ ತಿದ್ದುಪಡಿ ಹಾಗೂ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ನಡೆಸಲು ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
2018ರಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ನಡೆಸಲು ಮುಂಬೈ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್ ಹಾಗೂ ಸಿಟಿ ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶವನ್ನು ನೀಡಿದೆ.
ತಮಿಳುನಾಡು ಹಾಗೂ ಕರ್ನಾಟಕದಂತ ರಾಜ್ಯಗಳಲ್ಲಿ ಇದೇ ರೀತಿಯ ಸಾಂಪ್ರದಾಯಿಕ ಕ್ರೀಡೆಗಳನ್ನು ನಡೆಸಲಾಗುತ್ತಿದೆ, ಹೀಗಿರುವಾಗ ಮಹಾರಾಷ್ಟ್ರದಲ್ಲೂ ಸಹ ಎತ್ತಿನಗಾಡಿ ಓಟದ ಸ್ಪರ್ಧೆಯ ಮೇಲಿನ ನಿಷೇಧವನ್ನು ಹಿಂಪಡೆಯಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸರ್ವೋಚ್ಛ ನ್ಯಾಯಾಲಯದ ಎದುರು ಮನವಿ ಮಾಡಿತ್ತು.
2017ರ ನಿಯಮಗಳ ಪ್ರಕಾರ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಸಲು ಅವಕಾಶ ನೀಡಬೇಕು ಎಂದು ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಹಾಗೂ ಸಿಟಿ ರವಿಕುಮಾರ್ ನೇತೃತ್ವದ ನ್ಯಾಯಪೀಠದ ಎದುರು ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ.
ಮಹಾರಾಷ್ಟ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಕಟ್ಟುನಿಟ್ಟಿನ ನಿಯಮಾವಳಿಗಳ ಅಡಿಯಲ್ಲಿ ಎತ್ತಿನಗಾಡಿ ಓಟವನ್ನು ನಡೆಸಲು ಬಾಂಬೆ ಹೈಕೋರ್ಟ್ ತಡೆ ನೀಡಿತ್ತು ಎಂದು ಹೇಳಿದ್ದರು.