ಬೆಂಗಳೂರು: 40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ.
ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 9 ಗಂಟೆಯ ನಂತರ ಪಾರ್ಥಿವ ಶರೀರವನ್ನು ದೊಡ್ಡಬಳ್ಳಾಪುರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಸ್ಥಳಾಂತರ ಮಾಡಲಾಗುವುದು. ಅಂತಿಮ ದರ್ಶನದ ನಂತರ ಇಂದು ಸಂಜೆ 5 ಗಂಟೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಈಡಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಅಕ್ಟೋಬರ್ 19, 1925 ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಅವರು ಜನಿಸಿದರು. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಜಾಲಪ್ಪ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರಾಗಿ, ಸಹಕಾರ, ಗೃಹ, ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಚಿಕ್ಕಬಳ್ಳಾಪುರದಿಂದ ಲೋಕಸಭೆ ಸದಸ್ಯರಾಗಿ 4 ಸಲ ಆಯ್ಕೆಯಾದ ಅವರು ಕೆಂದ್ರದಲ್ಲಿ ಒಮ್ಮೆ ಜವಳಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಸಂಸತ್ತಿನ ವಿವಿಧ ಸಮಿತಿಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.