ಶಿವಮೊಗ್ಗ: ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಈ ರೀತಿ ಗೊಂದಲ, ಗಲಭೆ ಸೃಷ್ಟಿಸಲಾಗಿದೆ. ಮಹಾನಾಯಕರ ಸ್ಮಾರಕ, ಪ್ರತಿಮೆಗಳಿಗೆ ಹಾನಿ ಮಾಡಲಾಗಿದೆ. ಇದೆಲ್ಲವನ್ನು ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಈಗಾಗಲೇ ಸೂಚನೆ ನೀಡಿದ್ದು, ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಇದರಲ್ಲಿ ಶಾಮೀಲಾದ ಎಲ್ಲರನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ವಿಧಾನಮಂಡಲ ಅಧಿವೇಶನದಲ್ಲಿ ಬೆಳಗಾವಿ ಘಟನೆ ಬಗ್ಗೆ ವ್ಯಾಪಕವಾಗಿ ಚರ್ಚಿಸಿ ಇಂತಹ ಘಟನೆ ಮರುಕಳಿಸದಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು. ತಪ್ಪಿತಸ್ಥರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿಯಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ತೀರ್ಮಾನಿಸುತ್ತಾರೆ. ವಿಜಯೇಂದ್ರ ಸಂಪುಟಕ್ಕೆ ಸೇರುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಮತಾಂತರ ನಿಷೇಧ ಕಾಯ್ದೆ ಬಗ್ಗೆ ನೂರಕ್ಕೆ ನೂರರಷ್ಟು ಜಾರಿಯಾಗುವ ವಿಶ್ವಾಸವಿದೆ ಎಂದರು.