ಬೆಂಗಳೂರು: ಪುಂಡಾಟಿಕೆ ಮೆರೆಯುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಕರೆ ನೀಡಿವೆ.
ಅಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಮಾಡಲು ತೀರ್ಮಾನಿಸಲಾಗಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಲಾರಿ ಮಾಲೀಕರ ಸಂಘ, ಆಟೋ, ಟ್ಯಾಕ್ಸಿ ಚಾಲಕರ ಸಂಘ, ಓಲಾ, ಉಬರ್ ಅಸೋಸಿಯೇಷನ್ ಸೇರಿದಂತೆ 35 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಖಾಸಗಿ ಶಾಲೆಗಳು ಒಕ್ಕೂಟ, ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಮೊದಲಾದ ಸಂಘಟನೆಗಳು ನೈತಿಕ ಬೆಂಬಲ ನೀಡಿವೆ. ಅಂದು ಸಂಪೂರ್ಣ ಬಂದ್ ಮಾಡಿ ಬೆಂಬಲಿಸಲು ಕನ್ನಡ ಪರ ಸಂಘಟನೆಗಳು ಮನವಿ ಮಾಡಿವೆ. ವಿವಿಧ ಸಂಘಟನೆಗಳು, ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಬೆಂಬಲ ಕೋರಲಿದ್ದು, ಬಂದ್ ಯಶಸ್ಸಿಗೆ ಕ್ರಮಕೈಗೊಳ್ಳಲಾಗುವುದು. ಕೆಎಸ್ಆರ್ಟಿಸಿ ಬಸ್ ಸಂಚಾರ ಇರಲಿದೆ ಎಂದು ಹೇಳಲಾಗಿದೆ.