ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಮತದಾರರ ಮನವೊಲಿಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದ್ದು, ನೀರಾವರಿ ಅಸ್ತ್ರದೊಂದಿಗೆ ಹೋರಾಟ ಪ್ರಾರಂಭಿಸಿವೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದ್ದರೆ ಇದೀಗ ಜಲಧಾರೆ ಯಾತ್ರೆ ಹೆಸರಲ್ಲಿ ಜೆಡಿಎಸ್ ಹೋರಾಟಕ್ಕೆ ಸಜ್ಜಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಕಿರುಕುಳ, ತಾರತಮ್ಯ ನೀತಿ ವಿರುದ್ಧ ಜೆಡಿಎಸ್ ಹೋರಾಟಕ್ಕೆ ಮುಂದಾಗಿದೆ ಎಂದು ತಿಳಿಸಿದರು.
ಕೇಂದ್ರದಿಂದ ಆಗಿರುವ ಅನ್ಯಾಯದ ಬಗ್ಗೆ ತಿಳಿಸಲು ಜಲಧಾರೆ ಯಾತ್ರೆ ಮೂಲಕ ಜನರ ಬಳಿ ಹೋಗುತ್ತೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನಮ್ಮನ್ನು ನಿರ್ಲಕ್ಷಿಸಿದೆ. ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಪುದುಚೆರಿ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕಕ್ಕೆ ಹೆಚ್ಚು ಅನ್ಯಾಯವಾಗಿದೆ. ದೇಶದ ಎರಡೂ ರಾಷ್ಟ್ರೀಯ ಪಕ್ಷಗಳು ಮಾಯಾ ಜಿಂಕೆಗಳು. ನೀರಾವರಿ ವಿಚಾರದಲ್ಲಿ ಯಾವುದೇ ಪದ್ಧತಿ ಅನುಸರಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷದ ಪಾದಯಾತ್ರೆಯಿಂದ ನಮಗೆ ಯಾವುದೇ ಆತಂಕವಿಲ್ಲ. ನಿರಾವರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಶುರುಮಾಡಿದ್ದಾರೆ. ಕಾಂಗ್ರೆಸ್ ನವರಿಗೆ ದೇವೇಗೌಡರ ಇತಿಹಾಸ ಗೊತ್ತಿಲ್ಲ. ರಾಜ್ಯದ ನೀರಾವರಿ ವಿಚಾರದಲ್ಲಿ ಹೆಚ್ ಡಿಡಿ ಬಗ್ಗೆ ನಿರ್ಲಕ್ಷ್ಯ ಬೇಡ. ನಿರ್ಲಕ್ಷ ಮಾಡಿದರೆ ರಾಜ್ಯಕ್ಕೆ ನಷ್ಟ ಎಂದು ಹೇಳಿದರು.