ಬೆಂಗಳೂರು: ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅವರು ಹೇಳಿಕೆ ನೀಡಿದ್ದು, ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.
ನೆಲ, ಜಲ, ಜನರ ಹಿತರಕ್ಷಣೆಗೆ ಎಲ್ಲಾ ಪಕ್ಷಗಳು ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡೋಣ. ಮೇಕೆದಾಟು ಯೋಜನೆ ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಂದಾಗಿ ಕೆಲಸ ಮಾಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೊರೋನಾ ಮೂರನೇ ಅಲೆ ರಾಜ್ಯವೂ ಸೇರಿದಂತೆ ವಿಶೇಷವಾಗಿ ಬೆಂಗಳೂರಿನಲ್ಲಿ ಅಧಿಕವಾಗಿದ್ದು, ಇಂತಹ ಸಂದರ್ಭದಲ್ಲಿ ಜನರ ಆರೋಗ್ಯ ಕಾಪಾಡಲು ಆದ್ಯತೆ ನೀಡಬೇಕು. ನಮ್ಮ ಕರ್ತವ್ಯ ನಿರ್ವಹಣೆಗೆ ಬದ್ಧತೆ ಅತ್ಯಗತ್ಯವಾಗಿದೆ. ಕೊರೋನಾ ಸೋಂಕು ತಡೆಗೆ ಕಾನೂನು ಉಲ್ಲಂಘಿಸದೇ ಎಲ್ಲರ ಸಹಕಾರದ ನಿರೀಕ್ಷೆಯಲ್ಲಿದ್ದೇವೆ ಎಂದು ಕಾಂಗ್ರೆಸ್ ಹೆಸರು ಉಲ್ಲೇಖಿಸದೆ ಸಿಎಂ ಸಹಕಾರ ಕೋರಿದ್ದಾರೆ.
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.