ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಇದು ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದೆ. ಕೊರೊನಾ ಅಬ್ಬರಿಸುತ್ತಿರುವ ಸಂದರ್ಭದಲ್ಲಿ ಸಾವಿರಾರು ಮಂದಿಯನ್ನು ಸೇರಿಸಿ ಪಾದಯಾತ್ರೆ ನಡೆಸುತ್ತಿರುವುದಕ್ಕೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಇದರ ಮಧ್ಯೆ ಎಐಸಿಸಿ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆನ್ನಲಾಗಿದೆ.
ಕೊರೊನಾ ಸಂದರ್ಭದಲ್ಲಿ ಪಾದಯಾತ್ರೆ ನಡೆಸುತ್ತಿರುವ ಕಾರಣ ಒಂದೊಮ್ಮೆ ಸೋಂಕಿತರ ಸಂಖ್ಯೆ ಹೆಚ್ಚಾದರೆ ಇದು ಪಕ್ಷಕ್ಕೆ ಕೆಟ್ಟ ಹೆಸರು ತರಬಹುದು. ಬಿಜೆಪಿ ಇದನ್ನೇ ಬಂಡವಾಳವನ್ನಾಗಿಸಿಕೊಳ್ಳಬಹುದು. ಜೊತೆಗೆ ಕೋರ್ಟ್ ಕೂಡಾ ಈ ಕುರಿತು ಪ್ರಸ್ತಾಪಿಸಿರುವ ಹಿನ್ನಲೆಯಲ್ಲಿ ಎಚ್ಚರಿಕೆಯ ಹೆಜ್ಜೆಗಳನ್ನಿಡುವಂತೆ ರಾಹುಲ್ ಗಾಂಧಿ, ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆನ್ನಲಾಗಿದೆ.
ಈ ಹಿನ್ನಲೆಯಲ್ಲಿ ಬಹುತೇಕ ಪಾದಯಾತ್ರೆ ಇಂದು ಅಂತ್ಯಗೊಳ್ಳಬಹುದು ಎನ್ನಲಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಕಾನೂನು ಘಟಕದ ಜೊತೆ ಮಾತುಕತೆ ನಡೆಸಲಿದ್ದಾರೆನ್ನಲಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರಿಗೂ ಕೋವಿಡ್ ಪಾಸಿಟಿವ್ ಆಗಿದೆ ಎಂದು ತಿಳಿದುಬಂದಿದೆ.