ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಪಾದಯಾತ್ರೆ ನಿಲ್ಲಿಸಲು ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಲಾಗಿದೆ. ಇಂದು ಬೆಳಿಗ್ಗೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಪಾದಯಾತ್ರೆ ಸಂಬಂಧ ದೂರವಾಣಿ ಮೂಲಕ ಮಾತನಾಡಿದ್ದು, ಬಳಿಕ ಈ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ.
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಇದರ ಮಧ್ಯೆ ಹೈಕೋರ್ಟ್ ಸಹ ಇಂತಹ ಸಂದರ್ಭದಲ್ಲಿ ಪಾದಯಾತ್ರೆ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಹಾಗೂ ಇದನ್ನು ತಡೆಯದಿರುವುದಕ್ಕೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಈ ಎಲ್ಲದರ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಸಂದೇಶ ರವಾನಿಸಿದೆ ಎನ್ನಲಾಗಿದೆ.
ಮುಂದಿನ ದಿನಗಳಲ್ಲಿ ಕೊರೊನಾ ಸ್ಪೋಟವಾದರೆ ಇದಕ್ಕೆ ಪಾದಯಾತ್ರೆ ವಿಷಯವನ್ನೇ ಬಿಜೆಪಿ ಪ್ರಮುಖ ಅಸ್ತ್ರವನ್ನಾಗಿಸಿಕೊಳ್ಳಬಹುದು. ಇದರಿಂದ ರಾಷ್ಟ್ರ ಮಟ್ಟದಲ್ಲೂ ಪಕ್ಷಕ್ಕೆ ಮುಜುಗರದ ಪರಿಸ್ಥಿತಿ ಎದುರಾಗಬಹುದು ಎಂಬ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ತಕ್ಷಣದಿಂದಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.