ಮಂಡ್ಯ: ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಕುರುಬಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಸ್ಥರು ಕೂಡ ಸಾಥ್ ನೀಡಿದ್ದು, ಮಕ್ಕಳು ಶಾಲೆಗೆ ಬೀಗ ಜಡಿದು ಶಿಕ್ಷಕರ ವರ್ಗಾವಣೆ ವಿರೋಧಿಸಿ ಪ್ರತಿಭಟನೆ ಮಾಡಿದ್ದಾರೆ.
ಗ್ರಾಮದ ಶಾಲೆಯಲ್ಲಿ 8 ವರ್ಷಗಳಿಂದ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಉದಯ್ ಕುಮಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಇದನ್ನು ವಿರೋಧಿಸಿ ಗ್ರಾಮಸ್ಥರು, ಮಕ್ಕಳು ಪ್ರತಿಭಟನೆ ನಡೆಸಿದ್ದು, ಅವರನ್ನು ಇದೇ ಶಾಲೆಯಲ್ಲಿ ಮುಂದುವರೆಸಬೇಕೆಂದು ಒತ್ತಾಯಿಸಿದ್ದಾರೆ.
ಮುಚ್ಚುವ ಸ್ಥಿತಿಯಲ್ಲಿದ್ದ ಶಾಲೆಗೆ ಬಂದ ಉದಯ್ ಕುಮಾರ್ ಅವರು ಗ್ರಾಮದ ಮಕ್ಕಳಿಗೆ, ಗ್ರಾಮಸ್ಥರಿಗೆ ಶಿಕ್ಷಣದ ಅರಿವು ಮೂಡಿಸಿದ್ದಾರೆ. ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡಿದ್ದಾರೆ. ಅಚ್ಚುಮೆಚ್ಚಿನ ಶಿಕ್ಷಕರಾಗಿರುವ ಅಂತಹವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಹೇಳಿದ್ದು, ವರ್ಗಾವಣೆ ರದ್ದುಪಡಿಸಿ ಇದೇ ಶಾಲೆಯಲ್ಲಿಯೇ ಮುಂದುವರಿಸಬೇಕೆಂದು ಮನವಿ ಮಾಡಿದ್ದಾರೆ.