ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೂ, ಸೋಂಕು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದೆ.
ಹೊಸಪೇಟೆಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿನ 6 ಜನ ಶಿಕ್ಷಕರು ಸೇರಿದಂತೆ 22 ಜನ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಗುರುವಾರ 19 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇಂದು ಮತ್ತೆ 9 ಜನ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಯಲ್ಲಿನ ಎಲ್ಲ ಸಿಬ್ಬಂದಿ ಹಾಗೂ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ವೈದ್ಯಾಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅಲ್ಲದೇ, ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಸೋಂಕು ವಕ್ಕರಿಸಿದೆ. ಹೀಗಾಗಿ ಈ ಕಾಲೇಜನ್ನು ಕೂಡ ಸೀಲ್ ಡೌನ್ ಮಾಡಲಾಗಿದ್ದು, ಇನ್ನುಳಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಂಕು ಉಲ್ಭಣಗೊಂಡಿರುವ ಹಿನ್ನೆಲೆಯಲ್ಲಿ ಈ ಕಾಲೇಜಿಗೆ ಒಂದು ವಾರ ರಜೆ ನೀಡಲಾಗಿದೆ. ಇದಕ್ಕೆ ಹತ್ತಿರವಿದ್ದ ಮತ್ತೊಂದು ಕಾಲೇಜಿನ ವಿದ್ಯಾರ್ಥಿಗಳನ್ನು ಕೂಡ ಮುಂಜಾಗೃತಾ ಕ್ರಮವಾಗಿ ಪರೀಕ್ಷೆಗೆ ಒಳಪಡಿಸಲಾಗಿದೆ.