ಬೆಂಗಳೂರು: ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೆ ಪಕ್ಷಾಂತರ ಪರ್ವ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ, ಜೆಡಿಎಸ್ ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಸೇರಿದಂತೆ ಒಟ್ಟು 19 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ನ 16 ಶಾಸಕರು ನನ್ನ ಜತೆ ಸಂಪರ್ಕದಲ್ಲಿದ್ದಾರೆ ಹೈಕಮಾಂಡ್ ಒಪ್ಪಿದರೆ ಈಗಲೇ ಅವರನ್ನು ಬಿಜೆಪಿಗೆ ಕರೆ ತರುತ್ತೇನೆ ಎಂದರು.
ಕಾಂಗ್ರೆಸ್, ಜೆಡಿಎಸ್ ಸೇರಿ ಒಟ್ಟು 19 ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಆದರೆ ಅವರಲ್ಲಿ ಮೂವರು ಜೆಡಿಎಸ್ ನವರು. ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಜತೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಜೆಡಿಎಸ್ ಶಾಸಕರನ್ನು ಟಚ್ ಮಾಡಲ್ಲ. ಉಳಿದಂತೆ ವರಿಷ್ಠರು ಒಪ್ಪಿದರೆ 16 ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆತರುತ್ತೇನೆ ಎಂದು ಹೇಳಿದರು.
ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ನನ್ನ ಜತೆ ಬಿಜೆಪಿಗೆ ಬಂದವರು ಯಾರೂ ಪಕ್ಷ ಬಿಟ್ಟು ಹೋಗುವುದೂ ಇಲ್ಲ. ಹೈಕಮಾಂಡ್, ಅಮಿತ್ ಶಾ ನನ್ನ ಜತೆ ಚನ್ನಾಗಿದ್ದಾರೆ. ನಾನು ಇಲ್ಲಿಯೇ ಇದ್ದು ಪಕ್ಷ ಸಂಘಟನೆ ಮಾಡುತ್ತೇನೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.