ನವದೆಹಲಿ: ಕೊರೊನಾ ಸೋಂಕಿನಂತಹ ಸಾಂಕ್ರಾಮಿಕ ರೋಗ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೂ ಡಿಜಿಟಲ್ ಸ್ಪರ್ಶ ನೀಡಲಾಗಿದೆ.
ಕೋವಿಡ್ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾನಸಿಕ ಸಮಸ್ಯೆಗಳ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಿದೆ. ಬೆಂಗಳೂರಿನ ನಿಮ್ಹಾನ್ಸ್ ನೇತೃತ್ವದಲ್ಲಿ ರಾಷ್ಟ್ರೀಯ ಮೆಂಟಲ್ ಟೆಲಿ ಹಬ್ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ.
ದೇಶದಲ್ಲಿ ಲಭ್ಯವಿರುವ ಎಲ್ಲಾ ವೈದ್ಯಕೀಯ ಸೇವೆಗಳ ವಿವರಗಳನ್ನು ಆನ್ ಲೈನ್ ನಲ್ಲಿ ಒದಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ರಾಷ್ಟ್ರೀಯ ವೈದ್ಯಕೀಯ ಸೇವೆಗಳ ಸಮಗ್ರ ವಿವರಗಳನ್ನು ಒದಗಿಸುವ ಆನ್ ಲೈನ್ ವೇದಿಕೆ ರೂಪಿಸಲಾಗಿದ್ದು, ಇದರಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ವೈದ್ಯರ ಸೇವೆಗಳ ಸಮಗ್ರ ಮಾಹಿತಿ ಲಭ್ಯವಿರಲಿದೆ. ವಿಶಿಷ್ಟ ಆರೋಗ್ಯ ಗುರುತು ಸಂಖ್ಯೆ ಮತ್ತು ಸಾರ್ವತ್ರಿಕ ಆರೋಗ್ಯ ಸೇವೆಗಳ ಮಾಹಿತಿಯೂ ಲಭ್ಯವಿರಲಿದೆ ಎಂದು ತಿಳಿಸಿದ್ದಾರೆ.