ಮುಂಬೈ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
ಜನವರಿ 8 ರಿಂದ ಚಿಕಿತ್ಸೆ ಪಡೆಯುತ್ತಿರುವ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಚಿತ್ರರಂಗ, ರಾಜಕೀಯ ರಂಗದ ಗಣ್ಯರು, ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಶನಿವಾರ ತಡರಾತ್ರಿ ನಟಿ ಶ್ರದ್ಧಾ ಕಪೂರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ, ನಿರ್ಮಾಪಕ ಮಧುರ್ ಭಂಡಾರ್ಕರ್ ಮತ್ತು ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಬ್ರೀಚ್ ಕ್ಯಾಂಡಿ ಆಸ್ಪತ್ರೆ ಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಪಿಯುಷ್ ಗೊಯಲ್, ನಾನು ಪ್ರಧಾನಿಯವರ ಸಂದೇಶವನ್ನು ಲತಾಮಂಗೇಶ್ಕರ್ ಕುಟುಂಬಕ್ಕೆ ತಿಳಿಸಿದ್ದೇನೆ. ಅವರು ಶೀಘ್ರವೇ ಚೇತರಿಸಿಕೊಳ್ಳಲಿ, ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತ ಗಾಯನ ಲೋಕದ ಲೆಜೆಂಡ್ ಲತಾಮಂಗೇಶ್ಕರ್ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಶನಿವಾರ ಗಾಯಕಿ ಆಶಾ ಭೋಂಸ್ಲೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ಸೋದರಿ ಲತಾ ಮಂಗೇಶ್ಕರ್ ಅವರ ಆರೋಗ್ಯ ವಿಚಾರಿಸಿದ್ದರು.