ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವ್ಯಾಪ್ತಿಯ ಐದು ಕಂಪನಿಗಳಲ್ಲಿ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗಿದೆ. ಕೆಪಿಟಿಸಿಎಲ್ ವಿವಿಧ ಹುದ್ದೆಗಳಿಗೆ ಕನ್ನಡ ಪರೀಕ್ಷೆ ಉತ್ತಿರ್ಣ ಕಡ್ಡಾಯವಾಗಿರುತ್ತದೆ.
ಬೆಸ್ಕಾಂ, ಮೆಸ್ಕಾಂ, ಜೆಸ್ಕಾ, ಹೆಸ್ಕಾಂ, ಸೆಸ್ಕಾಂಗಳಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕರ ಹುದ್ದೆಗಳಿಗೆ ಕನ್ನಡ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿದೆ.
ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಈ ಕ್ರಮದಿಂದಾಗಿ ಎಸ್ಕಾಂ ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಪಡೆಯಲು ಅನುಕೂಲವಾಗಲಿದೆ.
1456 ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್ 7 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯ್ಕೆ ಪರೀಕ್ಷೆ ನಡೆಸಲಿದೆ.
ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಮೇಲ್ಪಟ್ಟ ಪರೀಕ್ಷೆಯಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಇಲ್ಲವೇ, ಐಚ್ಛಿಕ ಭಾಷೆಯಾಗಿ ಅಥವಾ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು. ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಶೇ. 50 ಅಂಕ ಪಡೆಯಬೇಕಿದೆ ಎನ್ನಲಾಗಿದೆ.