ಬೆಂಗಳೂರು: ಸೋಮವಾರದಿಂದ 9, 10 ನೇ ತರಗತಿಗಳು ಆರಂಭವಾಗಲಿವೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಬಗ್ಗೆ ಮಾಹಿತಿ ನೀಡಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ತಿಳಿಸಲಾಗಿದೆ. ಶಾಲೆಗಳ ಸುತ್ತಮುತ್ತ ಪೊಲೀಸ್ ಭದ್ರತೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ರಾಜ್ಯಸರ್ಕಾರಕ್ಕೆ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್.ಪಿ., ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಚನೆ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸುವಂತೆ ತಿಳಿಸಲಾಗಿದೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಡುವವರ ಬಗ್ಗೆ ನಿಗಾ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಕೆಲವು ಮಕ್ಕಳು, ಪೋಷಕರು ಮತೀಯ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ. ಇದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.