ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಪಿಯುಸಿ ಮತ್ತು ಪದವಿ ಕಾಲೇಜುಗಳು ಆರಂಭವಾಗಲಿವೆ. ಕಾಲೇಜುಗಳ ಪುನಾರಂಭದ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ರಾಮನಗರ, ಬಾಗಲಕೋಟೆ, ರಾಯಚೂರು, ವಿಜಯಪುರ, ಕೊಪ್ಪಳ, ಉತ್ತರಕನ್ನಡ, ಮೈಸೂರು, ಮಂಡ್ಯ, ಶಿವಮೊಗ್ಗ, ಕಲಬುರ್ಗಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಪ್ರೌಢ ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಮೂರು ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಿಹೆಚ್ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸಾಗರದ ಪದವಿಪೂರ್ವ ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಫೆಬ್ರವರಿ 19 ರವರೆಗೆ ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.