ಬೆಳಗಾವಿ: ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗಳಿಗೆ ತೆರಳುವುದಾಗಿ ಪಟ್ಟು ಹಿಡಿದಿದ್ದಾರೆ. ಈ ನಡುವೆ ಬೆಳಗಾವಿ ವಿಜಯ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ನಡೆಸುತ್ತಿದ್ದ ಪ್ರತಿಭಟನೆಗೆ ಮುಸ್ಲಿಂ ಯುವಕರು ಸಾಥ್ ನೀಡಿದ್ದು, ಪರಿಸ್ಥಿತಿ ಉದ್ವಿಗ್ನಕ್ಕೆ ಕಾರಣವಾಗಿದೆ.
ಬೆಳಗಾವಿ ವಿಜಯ ಪ್ಯಾರಾಮೆಡಿಕಲ್ ಕಾಲೇಜಿಗೆ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದರು. ಈ ವೇಳೆ ಕಾಲೇಜು ಸಿಬ್ಬಂದಿಗಳು ಹಿಜಾಬ್ ತೆಗೆದು ತರಗತಿಗೆ ಬರುವಂತೆ ಸೂಚಿಸಿದ್ದಾರೆ. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಲೇಜಿಗೆ ಸಂಬಂಧವೇ ಪಡದ ಕೆಲ ಮುಸ್ಲಿಂ ಯುವಕರು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಾಥ್ ನೀಡಿದ್ದಲ್ಲದೇ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶ ನೀಡುವಂತೆ ಕಾಲೇಜು ಆಡಳಿತಮಂಡಳಿ ಜತೆ ವಾಗ್ವಾದಕ್ಕಿಳಿದಿದ್ದಾರೆ.
ʼಅಡುಗೆ ಮನೆʼಯ ಈ ಪದಾರ್ಥಗಳಲ್ಲೂ ಇದೆ ಆರೋಗ್ಯದ ಗುಟ್ಟು
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಡಿಸಿಪಿ ರವೀಂದ್ರ ಗಡಾದ್ ಭೇಟಿ ನೀಡಿ, ವಿದ್ಯಾರ್ಥಿನಿಯರ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಯುವಕರ ಗುಂಪು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಹಿಜಾಬ್ ಪರ ಘೋಷಣೆ ಕೂಗಲು ಆರಂಭಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಸ್ಥಳಕ್ಕೆ ಧಾವಿಸಿ, ಪ್ರತಿಭಟನೆಯಲ್ಲಿ ತೊಡಗಿದ್ದ ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.