ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೆಂಪು ಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಸದನದಲ್ಲಿಯೂ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಇದೀಗ ವಿಧಾನಸಭೆಯಲ್ಲಿಯೂ ಅಹೋರಾತ್ರಿ ಧರಣಿಗೆ ಮುಂದಾಗಿದೆ. ಈ ಕುರಿತು ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಷ್ಟ್ರಧ್ವಜಕ್ಕೆ ಅವಮಾನ ರಾಷ್ಟ್ರದ್ರೋಹದ ಕೆಲಸ. ಸಚಿವ ಈಶ್ವರಪ್ಪ ಹೇಳಿಕೆ ಸಂವಿಧಾನಕ್ಕೆ ಅಪಮಾನ. ಸಚಿವರ ವಿರುದ್ಧ ಕೇಸ್ ದಾಖಲಿಸಿಯೂ ಇಲ್ಲ, ರಾಜ್ಯಪಾಲರೂ ಅವರನ್ನು ವಜಾ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ನಾಯಕರು ಮೊದಲಿನಿಂದಲು ರಾಷ್ಟ್ರಧ್ವಜಕ್ಕೆ ಗೌರವ ಕೊಡುವವರಲ್ಲ. ಆರ್ ಎಸ್ ಎಸ್ ಹಿಡನ್ ಅಜೆಂಡಾವನ್ನು ಈಶ್ವರಪ್ಪ ಮೂಲಕ ಮಾಡಿಸಿದ್ದಾರೆ. ಸಚಿವರನ್ನು ಸಂಪುಟದಿಂದ ಕೈಬಿಡಬೇಕು, ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ವಿಧಾನಸಭೆಯಲ್ಲಿ ಕಾಂಗ್ರೆಸ್ ಅಹೋರಾತ್ರಿ ಹೋರಾಟ ನಡೆಸಲಿದೆ. ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.