ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವರು, ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಎಡಿಜಿಪಿ ಮುರುಗನ್ ಅವರನ್ನು ಜಿಲ್ಲೆಗೆ ಕಳುಹಿಸಲಾಗಿದೆ. ಸಧ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದರು.
ಪ್ರಕರಣ ಸಂಬಂಧ ಎಷ್ಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ, ಆದರೆ ಈವರೆಗೆ ಮೂವರನ್ನು ಬಂಧಿಸಲಾಗಿದೆ. ವಿಚಾರಣೆ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಲಿದೆ. ಬಂಧಿತ ಮೂವರ ಬಗ್ಗೆ ಸದ್ಯಕ್ಕೆ ಮಾಹಿತಿ ಹೊರ ಹಾಕುವಂತಿಲ್ಲ ಎಂದು ಹೇಳಿದರು.
ಪ್ರಕರಣದಲ್ಲಿ ಮೇಲ್ನೋಟಕ್ಕೆ ಐವರು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದೆ. ಅವರ ಹಿಂದೆ ಎಷ್ಟು ಜನರ ಕೈವಾಡವಿದೆ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ. ಹರ್ಷ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸವಾಗುತ್ತಿದೆ. ಹರ್ಷ ಕುಟುಂಬಕ್ಕೆ ಸರ್ಕಾರದಿಂದ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.