ಮೌ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಆವಾಜ್ ಹಾಕಿದ ಗ್ಯಾಂಗ್ಸ್ಟರ್ ಕಮ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿ ವಿರುದ್ದ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷವು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಈ ಮೈತ್ರಿಕೂಟದ ಅಭ್ಯರ್ಥಿಯಾಗಿ ಅಬ್ಬಾಸ್ ಅನ್ಸಾರಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸುತ್ತಿದ್ದು ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸಿದ ತಕ್ಷಣ ಸರ್ಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡದಂತೆ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ರಿಗೆ ಕೇಳಿಕೊಂಡಿದ್ದೇನೆ ಎಂದಿದ್ದಾರೆ.
ನಾನು ಮುಂದಿನ ಆರು ತಿಂಗಳವರೆಗೆ ಸರ್ಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡದಂತೆ ಅಖಿಲೇಶ್ ಯಾದವ್ ಬಳಿಯಲ್ಲಿ ಮನವಿ ಮಾಡಿದ್ದೇನೆ. ಮೊದಲು ನಾನು ಸರ್ಕಾರಿ ಅಧಿಕಾರಿಗಳ ಜೊತೆಯಲ್ಲಿ ಕೆಲವು ಲೆಕ್ಕಾಚಾರಗಳನ್ನು ಮಾಡುತ್ತೇನೆ. ಇದಾದ ಬಳಿಕವೇ ಅವರ ವರ್ಗಾವಣೆ ಆದೇಶದ ಪ್ರತಿಯು ಮುದ್ರಣವಾಗಲಿದೆ ಎಂದಿದ್ದರು.
ಈ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಈ ವಿಡಿಯೋವನ್ನು ಗಮನಿಸಿದ ಎಡಿಜಿ ಪ್ರಶಾಂತ್ ಕುಮಾರ್ ಅಬ್ಬಾಸ್ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.