ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ ಮೀಸಲಾತಿ ನೀಡಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಬೇಕೆಂಬುದು ಸರ್ಕಾರದ ಆಶಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಕುರಿತು ಮೂರು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನ ಕುರಿತಾಗಿ ಮಾಹಿತಿ ಸಂಗ್ರಹಿಸಲಾಗುವುದು. ಕಾನೂನು ತಜ್ಞರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜೊತೆ ಚರ್ಚೆ ನಡೆಸಿ ಎರಡು-ಮೂರು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಒಬಿಸಿ ಸಮುದಾಯಕ್ಕೆ ಅನ್ಯಾಯವಾಗದಂತೆ ತಾಪಂ, ಜಿಪಂ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಅವರು ತಿಳಿಸಿದ್ದಾರೆ.