ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷೆ ಸ್ಥಾನದಿಂದ ಸೋನಿಯಾ ಗಾಂಧಿ ಅವರನ್ನು ಬದಲಾಯಿಸಬೇಕು ಎಂಬ ಒತ್ತಾಯಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದೆ.
ಪಂಜಾಬ್ ರಾಜ್ಯ ಆಡಳಿತಾರೂಢ ಕಾಂಗ್ರೆಸ್ ಕೈತಪ್ಪಿರುವುದು ಕೈ ನಾಯಕರಿಗೆ ಮತ್ತಷ್ಟು ಮುಜುಗರಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷೆ ಸ್ಥಾನದಿಂದ ಬದಲಾಯಿಸಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಮುಕುಲ್ ವಾಸ್ನಿಕ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ರೆಬಲ್ ನಾಯಕರೆಂದೇ ಗುರುತಿಸಿಕೊಂಡಿರುವ ಜಿ 23 ನಾಯಕರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಕಾರಣಕ್ಕೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಸೋನಿಯಾ ಗಾಂಧಿಯವರೇ ಪೂರ್ಣಾವಧಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರ ನೇಮಕವಾಗಿಲ್ಲ. ಇದು ಕೂಡ ಚುನಾವಣೆಯ ಮೇಲೆ ಪರಿಣಾಮ ಬೀರಲು ಕಾರಣ ಎನ್ನಲಾಗಿದೆ.
ಇದೀಗ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿರುವ ಹಿನ್ನೆಲೆಯಲ್ಲಿ ಜಿ 23 ನಾಯಕರು ನಾಯಕತ್ವ ಬದಲಾವಣೆ ಬಗ್ಗೆ ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ.