ಹುಬ್ಬಳ್ಳಿ: ಬೇಸಿಗೆ ರಜೆಯ ಅವಧಿಯನ್ನು ಕಡಿತಗೊಳಿಸದೆ ಮೇ 31 ರವರೆಗೆ ಎಂದಿನಂತೆ ರಜೆ ನೀಡಬೇಕು ಎಂದು ಹುಬ್ಬಳ್ಳಿ ಗ್ರಾಮೀಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಏಪ್ರಿಲ್-ಮೇ ತಿಂಗಳಿನಲ್ಲಿ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪ ಇರುತ್ತದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸಿದರೆ ಶಿಕ್ಷಕರು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ಹೇಳಿದ್ದಾರೆ.
ಬೇಸಿಗೆ ರಜೆ ಅವಧಿ ಕಡಿತದ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಪ್ರಸಕ್ತ ಸಾಲಿನ ಬೇಸಿಗೆ ರಜೆ ಕಡಿತಗೊಳಿಸದೆ ಪ್ರತಿವರ್ಷದಂತೆ ಮೇ 31 ರವರೆಗೂ ಮುಂದುವರೆಸಬೇಕು ಎಂದು ಶಿಕ್ಷಣ ಸಚಿವರು ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.