ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ಸಿ ಪರೀಕ್ಷೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿದೆ.
ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೊಠಡಿಗೆ ಕಡ್ಡಾಯವಾಗಿ ಶಾಲಾ ಸಮವಸ್ತ್ರ ಧರಿಸಿ ಹಾಜರಾಗಬೇಕೆಂದು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಅಂತೆಯೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದವರೆಗೆ ಹಿಜಾಬ್ ಧರಿಸಿ ಬಂದು ನಂತರ ಹಿಜಾಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದಾರೆ.
ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಸುಗಮವಾಗಿ ಆರಂಭವಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾರಿಗೂ ಪ್ರವೇಶ ಇರುವುದಿಲ್ಲ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಕರ್ತವ್ಯನಿರತ ಸಿಬ್ಬಂದಿಯನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದಲ್ಲಿ ಯಾರಿಗೂ ಪ್ರವೇಶ ಇರುವುದಿಲ್ಲ.
ಹಿಜಾಬ್ ಗಿಂತ ಭವಿಷ್ಯ ಮುಖ್ಯವೆಂದು ಮಕ್ಕಳು, ಪೋಷಕರು ಹೇಳಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.
ಮಕ್ಕಳ ಭವಿಷ್ಯ ಮುಖ್ಯವಾಗಿದ್ದು, ಪೋಷಕರು ನಿರ್ಲಕ್ಷ್ಯ ಮಾಡಬಾರದು. ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ. ಅವರು ಆತಂಕವಿಲ್ಲದೆ ಪರೀಕ್ಷೆ ಬರೆಯಲೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.