ಜೈಪುರ: ಗರ್ಭಿಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಕಾರಣವಾದ ಆರೋಪದ ಮೇಲೆ ಮಹಿಳಾ ವೈದ್ಯರ ಮೇಲೆ ಪ್ರಕರಣ ದಾಖಲಾಗಿತ್ತು. ಇದರಿಂದ ಬೇಸತ್ತ ವೈದ್ಯರು ಆತ್ಮಹತ್ಯೆಯ ದಾರಿ ತುಳಿದಿದ್ದಾರೆ. ವೈದ್ಯರಾದ ಅರ್ಚನಾ ಶರ್ಮಾ ಮತ್ತು ಅವರ ಪತಿ ನಡೆಸುತ್ತಿದ್ದ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗರ್ಭಿಣಿಯ ಕುಟುಂಬ ಸದಸ್ಯರು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದ ನಂತರ ಅರ್ಚನಾ ವಿರುದ್ಧ ಲಾಲ್ಸೋಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಹಾಗೂ ತಪ್ಪಿತಸ್ಥ ವೈದ್ಯರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಎಫ್ಐಆರ್ನಿಂದ ಒತ್ತಡಕ್ಕೆ ಒಳಗಾದ ಡಾ. ಅರ್ಚನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿರ್ಲಕ್ಷ್ಯದಿಂದ ಗರ್ಭಿಣಿಯ ಸಾವಿಗೆ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆಸ್ಪತ್ರೆಯ ಮೇಲಿರುವ ತನ್ನ ನಿವಾಸದಲ್ಲಿ ವೈದ್ಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.