ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಗುರುತಿಸಿ ಬೇರೆ ಕಡೆಗೆ ಸ್ಥಳಾಂತರ ಮಾಡುವ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದೆ. ಶಿಕ್ಷಕರ ವಲಯದಿಂದ ಇದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಹೆಚ್ಚುವರಿ ಶಿಕ್ಷಕರನ್ನು ಗುರುತಿಸಲು ಸರ್ಕಾರಿ ಪ್ರೌಢಶಾಲೆಗಳಲ್ಲಿ 70 ವಿದ್ಯಾರ್ಥಿಗಳಿಗೆ ಒಂದು ವಿಭಾಗ ಎಂದು ನಿಗದಿಪಡಿಸಿರುವ ಮಾನದಂಡದ ಬಗ್ಗೆ ಶಿಕ್ಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರಿ ಶಾಲೆ ಶಿಕ್ಷಕರನ್ನು ಒಂದು ವರ್ಷ ಕಡ್ಡಾಯವಾಗಿ ವರ್ಗಾವಣೆ, ಮತ್ತೊಂದು ವರ್ಷ ಹೆಚ್ಚುವರಿ ಶಿಕ್ಷಕರನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಮೂಲಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತದೆ.
ಕಳೆದ ಮೂರು ವರ್ಷಗಳಿಂದ ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಡ್ಡಾಯ ವರ್ಗಾವಣೆ ಪ್ರಕ್ರಿಯೆ ಮುಗಿದಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಶಿಕ್ಷಣ ಇಲಾಖೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಹೆಚ್ಚುವರಿ ಹುದ್ದೆಗಳನ್ನು ಗುರುತಿಸಿ ಸ್ಥಳಾಂತರ ಮಾಡಲು ಮುಂದಾಗಿದೆ.
ಹೆಚ್ಚುವರಿ ಸ್ಥಳಾಂತರ ಪ್ರಕ್ರಿಯೆ ಮಾಡಲು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ ಅವೈಜ್ಞಾನಿಕ ಅಂಶಗಳಿವೆ. ಹೆಚ್ಚುವರಿ ಹೆಸರಲ್ಲಿ ಶಿಕ್ಷಕರಿಗೆ ಶಿಕ್ಷೆ ನೀಡಿದಂತಾಗುತ್ತದೆ. ಇದನ್ನು ಕೈಬಿಟ್ಟು ಶಿಕ್ಷಕ ಸ್ನೇಹಿಯಾಗಿ ಮತ್ತು ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಬೇಕೆಂದು ಹೇಳಲಾಗಿದೆ.
ಶಿಕ್ಷಣ ಇಲಾಖೆಯಿಂದ ಹೆಚ್ಚುವರಿ ಎಂದು ಗುರುತಿಸಿದ ಶಿಕ್ಷಕರನ್ನು ಮೊದಲ ಹಂತದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಹುದ್ದೆ ಇರುವ ಶಾಲೆಗಳಿಗೆ ಸ್ಥಳಾಂತರ ಮಾಡಲಾಗುವುದು. ಜಿಲ್ಲೆಯೊಳಗೆ ಅವಶ್ಯಕತೆ ಇಲ್ಲದಿದ್ದರೆ, ವಿಭಾಗ ವ್ಯಾಪ್ತಿಯ ಶಾಲೆಗಳಿಗೆ ಸ್ಥಳಾಂತರ ಮಾಡಲಾಗುತ್ತದೆ. ವಿಭಾಗ ವ್ಯಾಪ್ತಿಯಲ್ಲಿಯೂ ಇಲ್ಲದಿದ್ದರೆ ರಾಜ್ಯದ ಯಾವುದೇ ಜಿಲ್ಲೆಗೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.
PCM, CBZ ಪದವಿ ಪಡೆದ ಶಿಕ್ಷಕರು ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಪಾಠ ಮಾಡುತ್ತಾರೆ. ಇಲಾಖೆ ನಿಗದಿಪಡಿಸಿದ ಮಾನದಂಡಗಳ ಪ್ರಕಾರ 6 ರಿಂದ 7 ವಿಭಾಗಗಳು ಇರುವ ಪ್ರೌಢಶಾಲೆಗೆ ಇಬ್ಬರು PCM ಮತ್ತು ಒಬ್ಬರು CBZ ಶಿಕ್ಷಕರನ್ನು ನಿಯೋಜಿಸುವುದಾಗಿ ಹೇಳಲಾಗಿದೆ. ಇದರಿಂದ CBZ ಬೋಧಿಸುವ ಶಿಕ್ಷಕರಿಗೆ ಅನ್ಯಾಯವಾಗುತ್ತದೆ. ಹೆಚ್ಚುವರಿ ಹೆಸರಿನಲ್ಲಿ ಶಿಕ್ಷಕರಿಗೆ ಶಿಕ್ಷೆ ನೀಡಿದಂತಾಗುತ್ತದೆ ಎಂಬ ಆರೋಪ ಕೂಡ ಕೇಳಿಬಂದಿದೆ.