ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದು ಸಮುದಾಯದ ವಿರುದ್ಧ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಸಂವಿಧಾನಬಾಹಿರ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಿರ್ದೇಶನದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪನವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಅವರು ಹೇಳಿಕೆ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲಾಗಿದೆ. ಪಾಲಿಕೆ ಸದಸ್ಯ ಚನ್ನಬಸಪ್ಪ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಈಶ್ವರಪ್ಪ ಹೇಳಿಕೆಯಿಂದ ಶಿವಮೊಗ್ಗದಲ್ಲಿ ಗಲಭೆಯಾಗಿದೆ ಎಂದು ಆರೋಪಿಸಿ ರಿಯಾಜ್ ಅಹ್ಮದ್ ದೊಡ್ಡಪೇಟೆ ಠಾಣೆಗೆ ದೂರು ನೀಡಲು ಹೋಗಿದ್ದರು. ದೂರು ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಸೂಚನೆಯ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.