ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೂ ಮುನ್ನ ಕಳುಹಿಸಿದ್ದ ವಾಟ್ಸಾಪ್ ಸಂದೇಶದಲ್ಲಿ ತಮ್ಮ ಸಾವಿಗೆ ಸಚಿವ ಈಶ್ವರಪ್ಪನವರೇ ನೇರ ಕಾರಣ. ಕಾಮಗಾರಿ ಬಿಲ್ ಪಡೆಯಲು ಅವರು ತಮ್ಮ ಆಪ್ತರ ಮೂಲಕ ಶೇ.40 ಕಮೀಷನ್ ಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದರು.
ಈ ಹಿನ್ನಲೆಯಲ್ಲಿ ಈಶ್ವರಪ್ಪನವರ ವಿರುದ್ದ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಸಂಜೆ ಈಶ್ವರಪ್ಪನವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ತಮ್ಮ ಆಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಈಶ್ವರಪ್ಪ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿ ರಾಜೀನಾಮೆ ಸಲ್ಲಿಸಲಿದ್ದಾರೆ.
ಇದರ ಮಧ್ಯೆ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಸಂತೋಷ್ ಪಾಟೀಲ್ ದು ಆತ್ಮಹತ್ಯೆಯೋ, ಕೊಲೆಯೋ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟ ವಿಷ್ಣುವರ್ಧನ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸತ್ಯಾಂಶ ಹೊರ ಬೀಳಲಿದೆ ಎಂದಿದ್ದಾರೆ.
ಈಶ್ವರಪ್ಪ ವಿರುದ್ದ ಕಮೀಷನ್ ದಂಧೆ ಆರೋಪ ಕೇಳಿ ಬಂದಿರುವ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಈಶ್ವರಪ್ಪನವರು ಈ ಎಲ್ಲ ವಿಚಾರದಲ್ಲೂ ಆರೋಪಮುಕ್ತರಾಗಿ ಹೊರ ಬರಲಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.