ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷವಿರುವಾಗಲೇ ಅದಕ್ಕೆ ಸಿದ್ಧತೆ ನಡೆಸಲು ಮುಂದಾಗಿರುವ ಆಡಳಿತರೂಢ ಭಾರತೀಯ ಜನತಾ ಪಕ್ಷ, ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಂಡಿದೆ.
ಈ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಾಲ್ಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಆದರೆ ಕಾರ್ಯಕಾರಿಣಿ ಸಭೆಗೆ ಒಂದು ದಿನ ಮುನ್ನ ಸಚಿವರೊಬ್ಬರು ಭ್ರಷ್ಟಾಚಾರದ ಕಾರಣಕ್ಕೆ ರಾಜೀನಾಮೆ ನೀಡಬೇಕಾಗಿ ಬಂದಿರುವುದು ಬಿಜೆಪಿ ಪಾಳೆಯದ ಹುರುಪನ್ನು ಕಸಿದುಕೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ 5 ಸಚಿವ ಸ್ಥಾನಗಳು ಖಾಲಿ ಇದ್ದು, ಸಂಪುಟ ವಿಸ್ತರಣೆ ಕುರಿತು ಸಹ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ 800 ಪ್ರತಿನಿಧಿಗಳು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.