ದೆಹಲಿ: ಶ್ರೀರಂಗಪಟ್ಟಣದಿಂದ ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯತ್ತ ಒಲವು ತೋರಿರುವ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಬುಧವಾರ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇಂದು ದೆಹಲಿಯಲ್ಲಿ ಭೇಟಿ ಮಾಡಿದ ಅವರು, ಶ್ರೀರಂಗಪಟ್ಟಣ – ಕೆಆರ್ ಪೇಟೆ – ಚನ್ನರಾಯಪಟ್ಟಣ – ಅರಸೀಕೆರೆ ರಸ್ತೆ ಶಿವಮೊಗ್ಗ, ಮೈಸೂರು ನಗರಗಳಿಗೆ ಸಂಪರ್ಕ ಕಲ್ಪಿಸಲಿದ್ದು, ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹಾಗಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಮನವಿ ಮಾಡಿದ್ದೇನೆ. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಭಾರತ್ ಮಾಲಾ -2 ಯೋಜನೆಯಡಿ ಇದನ್ನು ಪರಿಗಣಿಸುವುದಾಗಿ ತಿಳಿಸಿದ್ದಾರೆ. ಇದರಿಂದ ಮಂಡ್ಯ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಸಚಿವ ಡಾ. ನಾರಾಯಣಗೌಡ ಅವರ ಆಪ್ತ ಕಾರ್ಯದರ್ಶಿ ಹೆಚ್.ಜಿ. ಪ್ರಭಾಕರ್ ಅವರು ಉಪಸ್ಥಿತರಿದ್ದರು.