ಬೆಂಗಳೂರು: ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಹಾಗೂ ಸಚಿವ ಎಂ.ಟಿ.ಬಿ.ನಾಗರಾಜ್ ನಡುವಿನ ಕಿತ್ತಾಟ ಮುಂದುವರೆದಿದ್ದು, ಸಂಸದರು ಕಾಣದಂತೆ ಮಾಯವಾಗಿದ್ದಾರೆ ಎಂದು ಎಂಟಿಬಿ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್, ಸಂಸದ ಬಚ್ಚೇಗೌಡ ಯಾವುದೇ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸಂಸದರ ಅನುದಾನವನ್ನೂ ಯಾವುದೇ ತಾಲೂಕುಗಳಿಗೆ ಹಂಚಿಕೆ ಮಾಡುತ್ತಿಲ್ಲ. ಹೊಸಕೋಟೆ ತಲೂಕಿಗೆ ಮಾತ್ರ ಸೀಮಿತ ಮಾಡಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಉಸ್ತುವಾರಿ ಅರುಣ್ ಸಿಂಗ್ ಬಳಿ ಪ್ರಸ್ತಾಪ ಮಾಡುತ್ತೇನೆ ಎಂದರು.
ಉಪಚುನಾವಣೆಯಲ್ಲಿ ನನ್ನ ಸೋಲಿಸಲು ಕಾಂಗ್ರೆಸ್ ಜತೆ ಕೈಜೋಡಿಸಿದ್ದರು. ಆ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಸಂಸದರ ನಡೆ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ಸಂಸದರ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯಿಸುತ್ತೇನೆ. ಎಲ್ಲಾ ವಿಚಾರಗಳನ್ನು ವರಿಷ್ಠರ ಬಳಿ ಚರ್ಚಿಸುವುದಾಗಿ ಹೇಳಿದ್ದಾರೆ.