ಸಾವಿರಾರು ಭಾರತೀಯರು ವಿದೇಶದಲ್ಲಿ ಉದ್ಯೋಗ ಮಾಡ್ತಿದ್ದಾರೆ. ಜೀವನೋಪಾಯಕ್ಕಾಗಿ ವಿದೇಶಕ್ಕೆ ಹೋಗುವ ಭಾರತೀಯರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.
ಕಳೆದ 8 ವರ್ಷಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಿದ್ದವರ ಪೈಕಿ 4000ಕ್ಕೂ ಹೆಚ್ಚು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ 2014ರಿಂದ ಇತರ ದೇಶಗಳಲ್ಲಿ 4,005 ಭಾರತೀಯರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ.
ಹೆಚ್ಚಿನ ಭಾರತೀಯರಿಗೆ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಾವಕಾಶ ದೊರೆಯುತ್ತದೆ. ಅಂಕಿ-ಅಂಶಗಳ ಪ್ರಕಾರ ಗಲ್ಫ್ ರಾಷ್ಟ್ರಗಳಲ್ಲೇ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ಸಾವಿನ ಮನೆಯ ಕದ ತಟ್ಟಿದ್ದಾರೆ.
ಸಚಿವಾಲಯದ ಮಾಹಿತಿಯಂತೆ ಬಹುತೇಕ ಆತ್ಮಹತ್ಯೆ ಪ್ರಕರಣಗಳು ವೈಯಕ್ತಿಕ ಅಥವಾ ಕೌಟುಂಬಿಕ ಕಾರಣದಿಂದ ನಡೆದಿವೆ. ಅದೇನೇ ಆದ್ರೂ ವಿದೇಶದಲ್ಲಿ ಹೆಚ್ಹೆಚ್ಚು ಭಾರತೀಯರು ಸಾವಿಗೆ ಶರಣಾಗುತ್ತಿರುವುದು ಕಳವಳಕಾರಿ ಸಂಗತಿ. ಹಾಗಾಗಿ ಅವರ ಕುಂದು ಕೊರತೆಗಳು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಯತ್ನಿಸುವುದಾಗಿ ಲೋಕಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಭರವಸೆ ನೀಡಿದ್ದಾರೆ.