ಬೆಂಗಳೂರು: ಕೋವಿಡ್ 4ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜನರು ಇನ್ಮುಂದೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಸಚಿವ ಸುಧಾಕರ್, ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಡ್ಡಾಯ ಮಾಸ್ಕ್ ಧರಿಸಲು ಸೂಚಿಸುವಂತೆ ಸಭೆಯಲ್ಲಿ ತಿಳಿಸಲಾಗಿದೆ ಎಂದರು.
ಲಸಿಕೆ ಹಾಗೂ ಮಾಸ್ಕ್ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಲ್ಲಿ ಸೋಂಕು ಕಂಡುಬಂದಿದೆ. ಈ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳುವುದು ಸೂಕ್ತ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಹಾಕದವರಿಗೆ ಸಧ್ಯಕ್ಕೆ ದಂಡ ವಿಧಿಸಲ್ಲ. ಆದರೆ ಜನರೇ ಮುಂಜಾಗೃತಾ ಕ್ರಮವಾಗಿ ಎಚ್ಚೆತ್ತುಕೊಳ್ಳಬೇಕು ಎಂದರು.
ಪಕ್ಷದ ಸಭೆ, ಸಮಾರಂಭಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು. ಹಲವು ರಾಜ್ಯಗಳಲ್ಲಿ ಕೋವಿಡ್ ಕೇಸ್ ಹೆಚ್ಚಾಗಿದೆ. ನಾಲ್ಕನೇ ಅಲೆ ಬರುವವರೆಗೂ ಕಾಯುತ್ತಾ ಕೂರಬೇಡಿ. ಜನರೇ ಮುನ್ನೆಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಅಗತ್ಯ ಎಂದು ಹೇಳಿದರು.
ಕೆಲ ಹೊತ್ತಲ್ಲೇ ಕೋವಿಡ್ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.