ಕಳೆದ ತಿಂಗಳು ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇವರುಗಳನ್ನು ಇರಿಸಲಾಗಿದೆ.
ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA) ಕೈಗೆತ್ತಿಕೊಂಡಿದ್ದು, ಈಗಾಗಲೇ ಒಂದು ಹಂತದ ವಿಚಾರಣೆ ಪೂರ್ಣಗೊಳಿಸಿದೆ. ಇದರ ಮಧ್ಯೆ ಬುಧವಾರದಂದು ಈ ಪ್ರಕರಣದ 10 ಆರೋಪಿಗಳ ಪೈಕಿ ಐದು ಮಂದಿಯನ್ನು ವಶಕ್ಕೆ ಪಡೆಯಲು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ತೆರಳಿದ ವೇಳೆ ಆರೋಪಿಗಳು ಹೈಡ್ರಾಮಾ ಮಾಡಿದ್ದಾರೆ ಎನ್ನಲಾಗಿದೆ.
ಬುಧವಾರ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆಯಲು ಹೋದಾಗ ರಂಜಾನ್ ಮುಗಿಯೋವರೆಗೂ ತಾವು ತೆರಳುವುದಿಲ್ಲ ಎಂದು ಪಟ್ಟು ಹಿಡಿದರೆನ್ನಲಾಗಿದೆ. ಆದರೂ ಅಧಿಕಾರಿಗಳು ವಶಕ್ಕೆ ತೆಗೆದುಕೊಳ್ಳಲು ಮುಂದಾದಾಗ ಗೋಡೆಗೆ ತಲೆ ಚಚ್ಚಿಕೊಂಡು ಹೈಡ್ರಾಮಾ ಮಾಡಿದ್ದಾರೆ. ಬಳಿಕ ಜೈಲಾಧಿಕಾರಿಗಳು ಮಧ್ಯಪ್ರವೇಶಿಸಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾದಳದ ವಶಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.