ರಾಜ್ಯದಲ್ಲಿ ಈಗಾಗಲೇ 65 ವೈದ್ಯಕೀಯ ಕಾಲೇಜುಗಳಿದ್ದು, ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ 9 ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಈ ವಿಷಯ ತಿಳಿಸಿದ್ದಾರೆ.
ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ನಾಲ್ಕು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಶೀಘ್ರದಲ್ಲೇ ಆರಂಭವಾಗುತ್ತಿದ್ದು, ಜೊತೆಗೆ ಮೂರು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಮಹಾರಾಷ್ಟ್ರ, ಮಧ್ಯಪ್ರದೇಶದ ನಂತರ ಕರ್ನಾಟಕದಲ್ಲಿ ಅತಿ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳಿಗೆ ಅವಕಾಶ ಲಭ್ಯವಾಗುತ್ತಿದ್ದು, ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡ 30.5 ರಷ್ಟು ಕೊಡುಗೆ ನಮ್ಮ ರಾಜ್ಯದ್ದೇ ಆಗಿದೆ ಎಂದ ಅವರು, ಪ್ರತಿವರ್ಷ 65,000 ಎಂಬಿಬಿಎಸ್ ವೈದ್ಯರು ಮತ್ತು 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸೇವೆಗೆ ಲಭ್ಯವಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು.