ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಭಾರಿ ಚರ್ಚೆ ಆರಂಭವಾಗಿದೆ.
ಸಿಎಂ ಸರ್ಕಾರಿ ನಿವಾಸದಲ್ಲಿ ಅಮಿತ್ ಶಾ ಹಾಗೂ ಬಿಜೆಪಿ ಶಾಸಕರು, ಸಂಸದರಿಗೆ ಭೋಜನಕೂಟ ಆಯೋಜಿಸಿರುವುದು ಹಾಗೂ ನಂತರ ನಡೆಯಲಿರುವ ಮಹತ್ವದ ಸಭೆ ತೀವ್ರ ಕುತೂಹಲ ಮೂಡಿಸಿದೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಾಯಕತ್ವ ಬದಲಾವಣೆ ಚರ್ಚೆಯೇ ಇಲ್ಲ ಎಂದಿದ್ದಾರೆ. ಸಿಎಂ ಬೊಮ್ಮಾಯಿ ನಾಯಕತ್ವ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.
ಯಾರಿಗೂ ಭ್ರಮೆ ಬೇಡ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ನಮ್ಮದೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವ ಸಂಶಯವೂ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.