ಬೆಂಗಳೂರು: ಆಸಿಡ್ ದಾಳಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ನೆರವು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಚಿತ ನಿವೇಶನ ನೀಡುವುದಾಗಿ ಹೇಳಿದ್ದಾರೆ.
ಅವರು ಇಂದು ಹಲೋ ಕಂದಾಯ ಸಚಿವರೆ(72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ) ಸಹಾಯ ವಾಣಿಯನ್ನು ಲೋಕಾರ್ಪಣೆ ಮಾಡಿದರು. ಆಸಿಡ್ ದಾಳಿಗೆ ಒಳಗಾಗಿರುವ ಮಹಿಳೆಯರಿಗೆ ನೀಡಲಾಗುತ್ತಿದ್ದ 3 ಸಾವಿರ ಮಾಸಾಶನವನ್ನು 10 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದ್ದು, ಸಂತ್ರಸ್ತ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಿದರು.
ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರು ಸ್ವಯಂ ಉದ್ಯೋಗ ಕೈಗೊಳ್ಳಲು 5 ಲಕ್ಷ ರೂ. ನೆರವು ನೀಡಲಾಗುವುದು. ಆಸಿಡ್ ದಾಳಿ ಸಂತ್ರಸ್ತರ ನೆರವಿಗೆ ಸರ್ಕಾರ ಮುಂದಾಗಿದ್ದು ವಸತಿ ಯೋಜನೆಯಡಿ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಶಾಸಕರಾದ ಎಂ. ಕೃಷ್ಣಪ್ಪ, ರಿಜ್ವಾನ್ ಅರ್ಷದ್, ಎಂ.ಪಿ. ಕುಮಾರಸ್ವಾಮಿ, ಸಂಸದ ಪಿ.ಸಿ. ಮೋಹನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್, ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ ಮತ್ತು ಇತರರು ಉಪಸ್ಥಿತರಿದ್ದರು.