ಬೆಂಗಳೂರು; ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಬದಲಾವಣೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿರ್ಧಾರಕ್ಕೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ನಡೆಯಿತು. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರ ಕೂಡ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.
ಸಂಪುಟ ವಿಸ್ತರಣೆ ಅಥವಾ ಬದಲಾವಣೆ ವಿಚಾರವಾಗಿ ಸಿಎಂ ಬೊಮ್ಮಾಯಿ ಸಕಾಲದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ. ಸಂಪುಟ ವಿಚಾರ ಅವರ ಪರಮಾಧಿಕಾರಕ್ಕೆ ಬಿಟ್ಟದ್ದು ಎಂದು ಹೇಳಿದರು.
ಇನ್ನು ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲ ಹಾಗೂ ಅಸಮಾಧಾನವಿಲ್ಲ. ನಾಯಕತ್ವ ವಿಚಾರದಲ್ಲಾಗಲಿ ಅಥವಾ ಬೇರೆ ಯಾವುದೇ ವಿಚಾರವಾಗಲಿ ಯಾವುದೇ ಗೊಂದಲಗಳು ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಗಳನ್ನು ಎದುರಿಸಬೇಕು ಎಂದು ತಿಳಿಸಿದರು.