ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದಲೂ ಭಾರಿ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಒಂದೇ ಒಂದು ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿಹೋಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗಿದ್ದು, ಶನಿವಾರದವರೆಗೆ ಮುಂದುವರೆಯಲಿದೆ. ರಾಜ್ಯದ 19 ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಕಾರಣ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಶಿವಮೊಗ್ಗ, ರಾಮನಗರ, ತುಮಕೂರು, ಉಡುಪಿ, ಉತ್ತರ ಕನ್ನಡ, ಕೋಲಾರ, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.