ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಾವಣಗೆರೆ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ಮೇ 20 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ. ಧಾರಾಕಾರ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿದೆ.
ಅದೇ ರೀತಿ ಶಿವಮೊಗ್ಗದಲ್ಲಿ ಮಹಾಮಳೆ ಮುಂದುವರೆದಿದ್ದು, ಜಿಲ್ಲೆಯ ಶಾಲೆಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಅಂಗನವಾಡಿಗಳಿಗೆ ಮೇ 20ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.