ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆಯೇ ಕೊನೆ ದಿನವಾಗಿದ್ದು, ಇಂದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ವಿಧಾನಸಭೆಯಿಂದ ವಿಧಾನಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆಗೆ ಮೂರು ಪಕ್ಷಗಳಲ್ಲಿಯೂ ಕಸರತ್ತು ನಡೆದಿದೆ. ನಾಳೆ ಕೊನೆದಿನವಾಗಿದ್ದರೂ, ಇದುವರೆಗೂ ಒಬ್ಬರೂ ನಾಮಪತ್ರ ಸಲ್ಲಿಸಿಲ್ಲ.
ಬಿಜೆಪಿ ಮತ್ತು ಕಾಂಗ್ರೆಸ್ ವರಿಷ್ಠರು ಅಭ್ಯರ್ಥಿಗಳ ಆಯ್ಕೆ ಬಗ್ಗೆ ರಾಜ್ಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದು, ಇಂದು ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಜೆಡಿಎಸ್ ನಲ್ಲಿ ಅಭ್ಯರ್ಥಿಗಳ ಆಯ್ಕೆಯ ನಿರ್ಧಾರವನ್ನು ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರ ವಿವೇಚನೆಗೆ ಬಿಡಲಾಗಿದೆ.
ಇಂದು ಬಹುತೇಕ ಮೂರು ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಮಾಡಿ ವರಿಷ್ಠರಿಗೆ ಪಟ್ಟಿ ಕಳುಹಿಸಿದೆ. ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಇಂದು ಅಭ್ಯರ್ಥಿಗಳ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.