ರಾಜ್ಯದಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ವಿಚಾರ ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದ್ದು, ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪಠ್ಯಪುಸ್ತಕಗಳ ಪರಿಷ್ಕರಣೆ ಸಂದರ್ಭದಲ್ಲಿ ಬಸವಣ್ಣ, ಅಂಬೇಡ್ಕರ್, ಕುವೆಂಪು ಸೇರಿದಂತೆ ಹಲವು ಮಹನೀಯರ ವಿಚಾರಗಳಿಗೆ ಅಪಚಾರ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪಠ್ಯ ಪರಿಷ್ಕರಣೆ ವಿವಾದ ತಾರಕಕ್ಕೇರುತ್ತಿದ್ದಂತೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈಗ ಪರಿಷ್ಕರಣೆ ಮಾಡಿರುವ ಪಠ್ಯಗಳಲ್ಲಿ ಯಾವುದಾದರೂ ಲೋಪಗಳಿದ್ದರೆ ಅದನ್ನು ಪರಿಶೀಲಿಸಿ ಸರಿಪಡಿಸುವುದಾಗಿ ಹೇಳಿದ್ದರು. ಇದರ ಮಧ್ಯೆ ರೋಹಿತ್ ನೇತೃತ್ವದ ಸಮಿತಿಗೆ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸಹ ಹೇಳಲಾಗಿತ್ತು ಎಂಬ ವಿಚಾರ ಬಹಿರಂಗವಾಗಿತ್ತು.
ಈ ಕುರಿತಂತೆ ಇದೀಗ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದು, ಪಿಯುಸಿಯ ‘ಹೊಸ ಧರ್ಮಗಳ ಉದಯ’ ಎಂಬ ಪಠ್ಯ ಭಾಗದ ಪರಿಷ್ಕರಣೆಯನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗೆ ವಹಿಸಲಾಗಿತ್ತು. ಇದೀಗ ಸಮಿತಿಯನ್ನು ಸರ್ಕಾರ ವಿಸರ್ಜಿಸಿರುವ ಕಾರಣ ಆ ಸಮಿತಿಯ ವರದಿಯನ್ನು ಪಡೆಯುವುದಿಲ್ಲ. ಜೊತೆಗೆ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯವನ್ನೇ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.