ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಇನ್ನೊಂದೆಡೆ ಇಡಿ ಸಮನ್ಸ್ ಖಂಡಿಸಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ದೆಹಲಿ ಇಡಿ ಕಚೇರಿ ಸಮೀಪ ಪ್ರತಿಭಟನೆ, ಸತ್ಯಾಗ್ರಹ ಆರಂಭಿಸಿದ್ದಾರೆ.
ಇಡಿ ಕಚೇರಿ ಇರುವ ದೆಹಲಿಯ ಅಬ್ದುಲ್ ಕಲಾಂ ರಸ್ತೆ ಸುತ್ತ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಇಡಿ ಕಚೇರಿಯಿಂದ ಹೊರಬರುವವರೆಗೂ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಪ್ರತಿಭಟನೆ ವೇಳೆ ಕೆ.ಸಿ ವೇಣುಗೋಪಾಲ್ ತೀವ್ರ ನಿಶ್ಯಕ್ತರಾಗಿದ್ದು, ಆದಾಗ್ಯೂ ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.