ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹೈದರಾಬಾದ್ ನಲ್ಲಿ ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ನೇತೃತ್ವದಲ್ಲಿ ರಾಜಭವನದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆ ನಡೆಸಿ ಟೈಯರ್ ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು, ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿಯವರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿಯವರನ್ನು ವಶಕ್ಕೆ ಪಡೆಯಲು ಮಹಿಳಾ ಪೊಲೀಸರು ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಏಕಾಏಕಿ ಕೆರಳಿ ಕೆಂಡವಾದ ರೇಣುಕಾ ಚೌಧರಿ, ತಮ್ಮ ಹಿಂದೆ ನಿಂತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಕೊರಳ ಪಟ್ಟಿ ಹಿಡಿದು ಎಳೆದಾಡಿ ಕಿಡಿಕಾರಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆ ಕಾಂಗ್ರೆಸ್ ನಾಯಕಿ ದರ್ಪಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.