ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಇಂದೂ ಕೂಡ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ರಾಹುಲ್ ಗಾಂಧಿಯವರಿಗೆ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು 5 ದಿನ ವಿಚಾರಣೆ ನಡೆಸುತ್ತಿದ್ದು, ದೆಹಲಿಯ ಎಐಸಿಸಿ ಕಚೇರಿ, ಇಡಿ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಕಾಂಗ್ರೆಸ್ ನಾಯಕರು, ಮಹಿಳಾ ಕಾರ್ಯಕರ್ತರು, ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಹಲವು ನಾಯಕರು ಭಾಗಿಯಾಗಿದ್ದಾರೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಎಳೆದೊಯ್ದು ವಾಹನಗಳಲ್ಲಿ ತುಂಬಿದ್ದಾರೆ. ಪೊಲೀಸರ ವರ್ತನೆಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಇಡಿ ವಿಚಾರಣೆ ನಡೆಸಲಾಗುತ್ತಿದೆ. ನಾವು ಕಾನೂನಿಗೆ ವಿರುದ್ಧವಾಗಿ ಎಂದೂ ನಡೆದುಕೊಂಡಿಲ್ಲ. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಿಗೆ ಧೈರ್ಯ ತುಂಬಲೆಂದೇ ರಾಜ್ಯಗಳಿಂದ ಕಾಂಗ್ರೆಸ್ ನಾಯಕರು ಬಂದಿದ್ದೇವೆ ಎಂದು ಹೇಳಿದರು.