ಬೆಂಗಳೂರು: ಬೆಂಗಳೂರು ನಗರ ಸಂಚಾರ ದಟ್ಟಣೆ ನಿವಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಅವರು ಈ ಕುರಿತಾಗಿ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಹೆಬ್ಬಾಳ, ಮಹದೇವಪುರ, ಸಿಲ್ಕ್ ಬೋರ್ಡ್ ಜಂಕ್ಷನ್, ಸೇಂಟ್ ಜಾನ್ಸ್ ಆಸ್ಪತ್ರೆ, ವೈಟ್ಫೀಲ್ಡ್ ರಸ್ತೆ ಸೇರಿದಂತೆ ನಗರದ 10 ಪ್ರಮುಖ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ನಿವಾರಿಸಲು ಸೂಚನೆ ನೀಡಲಾಗಿದೆ.
ಟ್ರಾಫಿಕ್ ಸಿಗ್ನಲ್ ಗಳನ್ನು ಸಿಂಕ್ರೊನೈಸ್ ಮಾಡಲು ಸಿಎಂ ಸೂಚಿಸಿದ್ದಾರೆ. ಇದರ ಮೇಲುಸ್ತುವಾರಿಯನ್ನು ಖುದ್ದು ಡಿಸಿಪಿಗಳು ವಹಿಸಿಕೊಳ್ಳಬೇಕೆಂದು ಹೇಳಿದ್ದಾರೆ. ಹೆದ್ದಾರಿಗಳನ್ನು ಸಂಪರ್ಕಿಸುವ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು. ಮಳೆಯಿಂದಾಗಿ ಸಂಚಾರಕ್ಕೆ ತೊಂದರೆ ಆಗುವ ರಸ್ತೆಗಳ ಪತ್ತೆ ಮಾಡಿ ಅಂತಹ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಹೊರ ವರ್ತುಲ ರಸ್ತೆ ಹೈವೇಗಳಿಂದ ನಗರಪ್ರದೇಶಗಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಕ್ರಮಕೈಗೊಳ್ಳಲು ತಿಳಿಸಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಸುಗಮ ಸಂಚಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ನಿರ್ಭಯಾ ಯೋಜನೆಯಡಿ ಟ್ರಾಫಿಕ್ ಸಿಗ್ನಲ್ ಗಳಲ್ಲಿ ಕ್ಯಾಮೆರಾ ಅಳವಡಿಸಬೇಕು. ಆರ್ಟೀರಿಯಲ್, ಡೆನ್ಸಿಟಿ ರಸ್ತೆಗಳ ಒತ್ತುವರಿ ತೆರವಿಗೆ ಸಿಎಂ ಸೂಚನೆ ನೀಡಿದ್ದಾರೆ. ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದು, ಈ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ತಮಗೆ ವರದಿ ಸಲ್ಲಿಸುವಂತೆ ಹೇಳಿದ್ದಾರೆ.