ಲಖ್ನೌ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಹಾಗೂ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ಉತ್ತರ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ 2000 ಜನರನ್ನು ಬಂಧಿಸಲಾಗಿದೆ.
ಅಗ್ನಿಪಥ್ ಯೋಜನೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಈವರೆಗೆ 1,562 ಜನರನ್ನು ಬಂಧಿಸಲಾಗಿದೆ. ಪ್ರವಾದಿ ಮೊಹಮ್ಮದ್ ಬಗ್ಗೆ ನೂಪುರ್ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ 424 ಜನರನ್ನು ಬಂಧಿಸಲಾಗಿದೆ ಎಂದು ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರಶಾಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಗ್ನಿಪಥ್ ಯೋಜನೆ ವಿರೋಧಿಸಿ ಜೂನ್ 17ರಂದು ಯುವಕರು ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಜಾನ್ ಪುರದಲ್ಲಿ 535 ಜನರನ್ನು, ಬಲ್ಲಿಯಾದಲ್ಲಿ 222 ಜನರನ್ನು, ಚಂದೌಲಿಯಲ್ಲಿ 210 ಮಂದಿ ಬಂಧಿಸಲಾಗಿದೆ. 29 ಜಿಲ್ಲೆಗಳಲ್ಲಿ 82 ಪ್ರಕರಣ ದಾಖಲಿಸಲಾಗಿದೆ ಎಂದರು.
ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆಗೆ ಸಂಬಂಧಿಸಿದಂತೆ 424 ಜನರನ್ನು ಬಂಧಿಸಿದ್ದು, 10 ಜಿಲ್ಲೆಗಳಲ್ಲಿ 20 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.