ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಜುಲೈ 1ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು, ಇದರ ಮಧ್ಯೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಶುಭಸುದ್ದಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರದಂದು ಮಾತನಾಡಿದ ಅವರು ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಹಾಗೆಯೇ ನೇರಪಾವತಿಯಡಿ ವೇತನ ಪಡೆಯುತ್ತಿರುವವರ ಸೇವೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಕಾಯಂಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಹೀಗಾಗಿ ಜುಲೈ 1ರಿಂದ ನಡೆಸಲು ಉದ್ದೇಶಿಸಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ ಸಚಿವರು, ಆರೋಗ್ಯ ವಿಮೆಯ ಸೌಕರ್ಯವನ್ನು ಪೌರಕಾರ್ಮಿಕರು ಮತ್ತು ಸ್ವಚ್ಛತಾ ನೌಕರರಿಗೆ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಅಗತ್ಯ ಶಿಫಾರಸ್ಸಿನೊಂದಿಗೆ ಕಡತ ಮಂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 5300 ಪೌರಕಾರ್ಮಿಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.